ಸುರಪುರ | ‘ಸಂಭ್ರಮ ಶನಿವಾರ’ದಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ

ಸುರಪುರ: ಪಟ್ಟಣದ ಖುರೇಶಿ ಮೊಹಲ್ಲಾದ ಸರ್ಕಾರಿ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಕಾರ್ಯಕ್ರಮದ ಅಂಗವಾಗಿ “ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ” ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಮುಖ್ಯಗುರು ಸೋನಾ ಸುಕುಮಾರಿ, ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ದುಶ್ಚಟಗಳು ವ್ಯಕ್ತಿ, ಕುಟುಂಬ ಹಾಗೂ ಸಮಾಜದ ನೆಮ್ಮದಿಯನ್ನು ಹಾಳುಮಾಡುವ ಕಾರಣ ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸದಾ ದೂರವಿರಬೇಕು ಎಂದು ಸಲಹೆ ನೀಡಿದರು.
ಈ ವೇಳೆ ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳನ್ನು ಬಿಂಬಿಸುವ ಕಿರುನಾಟಕ ಪ್ರದರ್ಶಿಸಿ ಗಮನ ಸೆಳೆದರು. ಜೊತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ ಮತ್ತು ಸಾಮಾಜಿಕ ಹಾನಿಗಳ ಕುರಿತು ಚಿತ್ರಕಲೆ (ಡ್ರಾಯಿಂಗ್) ಸ್ಪರ್ಧೆ ಹಾಗೂ ಇತರ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸಾಮುವೇಲ್, ಮಮತಾ ಪುರಾಣಿಕಮಠ, ರೇಣುಕಾದೇವಿ, ಉರ್ದು ಶಾಲೆಯ ಪ್ರಭಾರ ಮುಖ್ಯಗುರು ಅಬ್ದುಲ್ ರೆಹಮಾನ್, ಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.






