ಸುರಪುರ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಸುರಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ನೀಟ್ ಪರೀಕ್ಷೆಯಲ್ಲಿ ಪದೇಪದೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆಯುತ್ತಿರುವುದು ಗಂಭೀರ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಖಂಡನೀಯವಾಗಿದೆ. ಈ ಘಟನೆಗೆ ಕಾರಣರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಭಟನೆಯಲ್ಲಿ ಮೃತಪಟ್ಟಿರುವ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪೊಲೀಸರೊಂದಿಗೆ ಕೆಲ ಖಾಸಗಿ ವ್ಯಕ್ತಿಗಳು ಸಹ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಮುಖಂಡರು, ಅಂತಹವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಬಳಿಕ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಹುಸೇನ ಸಾಬ್ ಎ.ಸರಕಾವಸ್ ಅವರ ಮೂಲಕ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರಾದ ಮಲ್ಲಿಕಾರ್ಜುನ ಕ್ರಾಂತಿ, ಚಂದ್ರಶೇಖರ ಹಸನಾಪುರ, ಸಾಹಿತಿ ಗಾಳೆಪ್ಪ ಪೂಜಾರಿ, ಮಲ್ಲಯ್ಯ ಕಮತಗಿ,ಮಾನು ಗುರಿಕಾರ,ಮಹಾದೇವಪ್ಪ ಬಿಜಾಸಪುರ, ಮಾನಪ್ಪ ಕಟ್ಟಿಮನಿ, ಭೀಮರಾಯ ಸಿಂದಗೇರಿ, ಮೂರ್ತಿ ಬೊಮ್ಮನಹಳ್ಳಿ, ಸೋಮು ಕಟ್ಟಿಮನಿ, ನಿಂಗಣ್ಣ ಜಿ ಮಾತನಾಡಿದರು.ಪ್ರತಿಭಟನೆಯಲ್ಲಿ ಚಂದ್ರಶೇಖರ ಕಟ್ಟಿಮನಿ, ರಾಮಣ್ಣ ಶೆಳ್ಳಗಿ, ಬಸವರಾಜ ದೊಡ್ಡಮನಿ, ಉಸ್ತಾದ್ ವಜಾಹತ್ ಹುಸೇನ್, ವೀರಭದ್ರಪ್ಪ ತಳವಾರಗೇರ,ನಾಗು ಗೋಗಿಕೇರ ಸೇರಿದಂತೆ ನೂರಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪಿ.ಐ ಉಮೇಶ ಎಂ ನಾಯಕ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.






