ಸುರಪುರ | ಹೆಮಡಗಿ ದಲಿತ ಕೇರಿಗೆ ಕುಡಿಯುವ ನೀರು ಕಲ್ಪಿಸುವಂತೆ ಆಗ್ರಹ

ಸುರಪುರ: ತಾಲೂಕಿನ ಹೆಮಡಗಿ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ಕಳೆದ ಎರಡು ತಿಂಗಳಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಘಟಕದ ಪದಾಧಿಕಾರಿಗಳು ಸೂಗೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಘಟನೆಯ ಮುಖಂಡರು, ಸೂಗೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮಡಗಿ ಗ್ರಾಮದ ದಲಿತ ಕೇರಿಯ ಕೊಳವೆ ಬಾವಿಗಳು ಕೆಟ್ಟುಹೋಗಿರುವುದರಿಂದ ಸುಮಾರು 100 ಮನೆಗಳ ನಿವಾಸಿಗಳು ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಜನರು ಬೇರೆ ಪ್ರದೇಶಗಳಿಗೆ ತೆರಳಿ ನೀರು ತರುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗಿದ್ದು, ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಕೊಳವೆ ಬಾವಿಗಳನ್ನು ದುರಸ್ತಿಗೊಳಿಸಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಮಸ್ಯೆಯನ್ನು ಶೀಘ್ರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕ ಅಧ್ಯಕ್ಷ ಬಸವರಾಜ ಹಾದಿಮನಿ, ಸಂಘಟನಾ ಕಾರ್ಯದರ್ಶಿ ಹಣಮಂತ ಅಡ್ಡೊಡಗಿ, ಸಹ ಕಾರ್ಯದರ್ಶಿ ಯಲ್ಲಪ್ಪ ಹೆಮ್ಮಡಗಿ, ಮುಖಂಡರಾದ ಶಿವು ಭೀಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.






