ಸುರಪುರ | ಹೆಚ್ಚು ಮುತುವರ್ಜಿ ವಹಿಸಿ ವಿದ್ಯಾರ್ಥಿಗಳಿಗೆ ಕಲಿಸಿ : ಪಂಡಿತರಾವ್

ಸುರಪುರ : ವಿದ್ಯಾರ್ಥಿಗಳು ಕನಿಷ್ಠ ಅಂಕಗಳನ್ನು ಪಡೆದು ಯಶಸ್ವಿಯಾಗಿ ಉತ್ತೀರ್ಣರಾಗುವಂತೆ ಮಾಡುವ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಜಿಲ್ಲಾ ಉಪ ನಿರ್ದೇಶಕ ಪಂಡಿತರಾವ್ ಆರ್. ಪವರ್ ತಿಳಿಸಿದರು.
ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸುಧಾರಣೆ ತರಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನೀಲನಕ್ಷೆ, ಮಾದರಿ ಪ್ರಶ್ನೆ ಪತ್ರಿಕೆಗಳು ಹಾಗೂ ಪರೀಕ್ಷಾ ತಂತ್ರಗಳ ಬಗ್ಗೆ ಸ್ಪಷ್ಟ ಮನನ ಮಾಡಿಸಬೇಕು ಎಂದು ಸೂಚಿಸಿದರು.
ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗದಂತೆ, ಕನಿಷ್ಠ ಅಂಕಗಳನ್ನು ಪಡೆಯುವಂತೆ ಎಲ್ಲಾ ಉಪನ್ಯಾಸಕರು ಹೆಚ್ಚಿನ ಮುತುವರ್ಜಿ ವಹಿಸಿ ಬೋಧನೆ ನಡೆಸಬೇಕು. ಉತ್ತಮ ಫಲಿತಾಂಶಕ್ಕಾಗಿ ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಪಂಡಿತರಾವ್ ಪವರ್ ಅವರು, ಗೊತ್ತಿರದ ವಿಷಯಗಳನ್ನು ಉಪನ್ಯಾಸಕರೊಂದಿಗೆ ಚರ್ಚಿಸಿ ಸ್ಪಷ್ಟಪಡಿಸಿಕೊಳ್ಳಬೇಕು. ನಿಯಮಿತ ಅಭ್ಯಾಸದ ಮೂಲಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪದವಿಪೂರ್ವ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ರುದ್ರಗೌಡ ಮಾಲಿ ಪಾಟೀಲ್, ಕಾಲೇಜಿನ ಪ್ರಾಚಾರ್ಯ ಮೋನಯ್ಯ ದೇವರಗೋನಾಲ, ಉಪನ್ಯಾಸಕ ಬಸವರಾಜ ಇನಾಮದಾರ, ಬಾಲಕರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಫಿಸಾಬ್ ಗುತ್ತೇದಾರ, ಗಂಗಾಧರ್ ರುಮಾಲ್ ಸೇರಿದಂತೆ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.







