ಸುರಪುರ | ನ.30ರವರೆಗೆ ಕೃಷ್ಣಾ ಕಾಲುವೆಗಳಿಗೆ ನೀರು ಹರಿಸಲು ಸಚಿವ ಚೆಲುವರಾಯಸ್ವಾಮಿಗೆ ಮನವಿ

ಸುರಪುರ : ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನಾರಾಯಣಪುರ ಜಲಾಶಯದಿಂದ ನವೆಂಬರ್ 30ರವರೆಗೆ ನೀರು ಹರಿಸುವಂತೆ ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಅವರು, ಬೆಂಗಳೂರಿನ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ರಾಜ್ಯದ ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಅವರನ್ನು ಮಾಜಿ ಸಚಿವ ಹಾಗೂ ಶಹಾಪುರ ಕ್ಷೇತ್ರದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರೊಂದಿಗೆ ಭೇಟಿಯಾಗಿ ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಕಾಲುವೆ ಜಾಲಗಳಿಗೆ ನೀರು ಹರಿಸುವಂತೆ ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ಹೇಳಿದರು.
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ಬೆಳೆದಿರುವ ಹತ್ತಿ, ತೊಗರಿ, ಭತ್ತ ಮತ್ತು ಮೆಣಸಿನಕಾಯಿ ಬೆಳೆಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಇದರಿಂದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಸಾಲದ ಸುಳಿಯಲ್ಲಿ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕ್ಷೇತ್ರದ ವಿವಿಧೆಡೆ ರೈತರು ಪ್ರತಿಭಟನೆ ನಡೆಸಿ, ಕಾಲುವೆಗಳಿಗೆ ನೀರು ಹರಿಸಿ ಬೆಳೆಗಳನ್ನು ಉಳಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದರು.
ನವೆಂಬರ್ 30ರವರೆಗೆ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಿ ರೈತರ ಹಿತ ಕಾಯಬೇಕು ಎಂದು ಸಚಿವರಿಗೆ ರೈತರ ಸಂಕಷ್ಟವನ್ನು ಮನವರಿಕೆ ಮಾಡಲಾಗಿದೆ. ಅಲ್ಲದೆ, ನೀರಾವರಿ ಸಲಹಾ ಸಮಿತಿ ಸಭೆಗೆ ರೈತ ಮುಖಂಡರು ಹಾಗೂ ರೈತ ಸಂಘಟನೆಗಳ ಪ್ರಮುಖರನ್ನು ವಿಶೇಷ ಆಹ್ವಾನಿತರನ್ನಾಗಿ ಕರೆಯಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು.
ಮನವಿಗೆ ಸ್ಪಂದಿಸಿದ ಸಚಿವರು, ನೀರು ಹರಿಸುವ ವಿಷಯವನ್ನು ನವೆಂಬರ್ 19ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದರು.
ಈ ಸಂದರ್ಭದಲ್ಲಿ ಕೃಷ್ಣಾ ಕಾಡಾ ನಿಗಮದ ಅಧ್ಯಕ್ಷ ಬಾಬು ಹೊನ್ನಾನಾಯಕ, ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಾ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.






