ಸುರಪುರ | ಜಿಲ್ಲಾ ಪಂಚಾಯತ್ ಮೀಸಲಾತಿ ಪರಿಷ್ಕರಿಸದಿದ್ದರೆ ಚುನಾವಣೆ ಬಹಿಷ್ಕಾರ: ಮಲ್ಲಿಕಾರ್ಜುನ ಕ್ರಾಂತಿ

ಸುರಪುರ: ಪರಿಶಿಷ್ಟ ಜಾತಿಯವರಿಗೆ ಜಿಲ್ಲಾ ಪಂಚಾಯಿತಿ ಚುನಾವಣೆಯ ಮೀಸಲಾತಿಯಲ್ಲಿ ಕಳೆದ ಹಲವು ವರ್ಷಗಳಿಂದ ಅನ್ಯಾಯವಾಗುತ್ತಿದೆ. ಈ ಅನ್ಯಾಯವನ್ನು ಕೂಡಲೇ ಸರಿಪಡಿಸದಿದ್ದರೆ ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಮತದಾನವನ್ನು ಬಹಿಷ್ಕರಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಎಚ್ಚರಿಕೆ ನೀಡಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸುರಪುರ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿದೆ. ಇದರಲ್ಲಿ ರಾಜನಕೋಳೂರು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿದೆ. ಆದರೆ, ಆ ಭಾಗದಲ್ಲಿ ಮೂಲ ಅಸ್ಪೃಶ್ಯತೆಗೆ ಒಳಗಾಗಿರುವ ಪರಿಶಿಷ್ಟ ಜಾತಿಯವರ ಸಂಖ್ಯೆ ಕಡಿಮೆಯಿದೆ ಎಂದು ಹೇಳಿದರು.
ಆದ್ದರಿಂದ ರಾಜನಕೋಳೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೀಸಲಾತಿಯನ್ನು ರದ್ದುಗೊಳಿಸಿ, ಪೇಠ ಅಮ್ಮಾಪುರ ಅಥವಾ ಖಾನಾಪುರ ಎಸ್.ಎಚ್. ಈ ಎರಡು ಕ್ಷೇತ್ರಗಳಲ್ಲಿ ಒಂದನ್ನು ಪರಿಶಿಷ್ಟ ಜಾತಿಯ ಪುರುಷರಿಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಮೀಸಲಾತಿಯನ್ನು ಪರಿಷ್ಕರಿಸಿ ಮರುಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರಲ್ಲಿ ಮನವಿ ಮಾಡಿದರು. ಬೇಡಿಕೆ ಈಡೇರದಿದ್ದರೆ ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಮತದಾನದಿಂದ ದೂರ ಉಳಿದು ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಚಂದ್ರಶೇಖರ ಹಸನಾಪುರ, ಮೂರ್ತಿ ಬೊಮ್ಮನಹಳ್ಳಿ ಮಾತನಾಡಿದರು. ಸಂಘಟನೆಯ ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ, ಮುಖಂಡ ಸಿದ್ದಣ್ಣ ಸುರಪುರಕರ್, ಬಸವರಾಜ ಬೊಮ್ಮನಹಳ್ಳಿ, ಆನಂದ ಹೇಮನೂರ, ಆನಂದ ಕಟ್ಟಿಮನಿ, ಮಹೇಶ ಸುಂಗಲಕರ್, ಸಂಗಣ್ಣ ಹೆಮ್ಮಡಗಿ, ಖಾಜಾ ಹುಸೇನಾ ಗುಡಗುಂಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






