ವಡಿಗೇರಾ | ಎಸ್‌ಐಆರ್ ಜಾಗೃತಿ ಅಭಿಯಾನಕ್ಕೆ ಚಾಲನೆ

ವಡಿಗೇರಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜಿಲ್ಲಾ ಹಾಗೂ ತಾಲೂಕು ‘ಸ್ವೀಪ್’ ಸಮಿತಿ ವತಿಯಿಂದ ಶನಿವಾರ ವಿಶೇಷ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹೀರೆಮಠ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ವಿಶೇಷ ಮತದಾರರ ನೋಂದಣಿ ಅಭಿಯಾನದ ಮೂಲಕ ಅರ್ಹ ಯುವ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಮಂಗಳ ಮಾತನಾಡಿ, ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಹೆಸರು ಪರಿಶೀಲಿಸಿ, ಅಗತ್ಯವಿದ್ದರೆ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಿದರು.
ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆದುಹಾಕುವುದು, ಹೆಸರು ಅಥವಾ ವಿಳಾಸ ತಿದ್ದುಪಡಿ ಸೇರಿದಂತೆ ವಿವಿಧ ಸೇವೆಗಳಿಗೆ ನಿಗದಿತ ನಮೂನೆಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.
ಈ ವೇಳೆ ಸಹಾಯಕ ನಿರ್ದೇಶಕರು ಕಿರಾಣಬಾಬು, ಪಿಡಿಒ ಬಿ ಆರ್ ಪಾಟೀಲ್, ಶೇಶಿಗಿರಿ ರಾವ್ , ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೇಶ್, ಟಿಎನ್ ಓ ಶರ್ಮೋದಿನ್, ಟಿಎಮ್ ಐಎಸ್ ಮಲ್ಲಿಕಾರ್ಜುನ ಹಾಗೂ ತಾಲ್ಲೂಕು ಪಂಚಾಯತಿ, ಗ್ರಾಪಂ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿಬಿ-ಜಿ ರಾಮ ಜಿ ಯೋಜನೆಯ ಸಿಬ್ಬಂದಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.






