ಯಾದಗಿರಿ | ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಯಾದಗಿರಿ : ಶಹಾಪೂರ ತಾಲೂಕಿನ ಸಗರ ಗ್ರಾಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು, ಕಾಂಗ್ರೆಸ್ ಪಕ್ಷದ ಜನಪರ ಹಾಗೂ ಅಭಿವೃದ್ಧಿಪರ ಆಡಳಿತವನ್ನು ಮೆಚ್ಚಿ ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಕಡೆಗೆ ಮರಳಿದ್ದಾರೆ ಎಂದು ಹೇಳಿದರು.
ನಮ್ಮ ಕಾಂಗ್ರೆಸ್ ಸರ್ಕಾರ ಬಡವರು, ರೈತರು, ಕಾರ್ಮಿಕರು ಹಾಗೂ ಮಹಿಳೆಯರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೇ ಕಾರಣಕ್ಕೆ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಜನರು ಸ್ವಯಂಪ್ರೇರಿತವಾಗಿ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಪಕ್ಷಕ್ಕೆ ಸೇರ್ಪಡೆಗೊಂಡವರು ಮುಂದಿನ ದಿನಗಳಲ್ಲಿ ಸಕ್ರೀಯವಾಗಿ ಕೆಲಸ ಮಾಡಿ ಕಾಂಗ್ರೆಸ್ ಗೆ ಇನ್ನಷ್ಟು ಬಲ ತುಂಬಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.





