ಯಾದಗಿರಿ | ಸಾಮಾಜಿಕ-ಆರ್ಥಿಕ ಸಮೀಕ್ಷೆಗೆ ಸಹಕಾರ ನೀಡಬೇಕು: ಡಾ.ಭೀಮಣ್ಣ ಮೇಟಿ

ಯಾದಗಿರಿ: ರಾಜ್ಯ ಸರ್ಕಾರ ಸೆ.22ರಿಂದ ಅ.7ರವರೆಗೆ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ, ಗಣತಿದಾರರಿಗೆ ಅಗತ್ಯವಾದ ಮಾಹಿತಿಯನ್ನು ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಕರೆ ನೀಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಧರ್ಮದ ಹೆಸರು ದಾಖಲಿಸುವಾಗ ತಮ್ಮ ಧರ್ಮವನ್ನು ಕಡ್ಡಾಯವಾಗಿ ನಮೂದಿಸಬೇಕು. ಅದೇ ರೀತಿ ಜಾತಿಯ ಹೆಸರನ್ನು ಬರೆಯಿಸುವ ಸಂದರ್ಭದಲ್ಲಿ ತಮ್ಮ ತಮ್ಮ ಜಾತಿಯನ್ನು ಸ್ಪಷ್ಟವಾಗಿ ದಾಖಲಿಸಬೇಕು ಎಂದು ಹೇಳಿದರು.
ಗಣತಿದಾರರು ಸೋಮವಾರದಿಂದ ಮನೆ ಬಾಗಿಲಿಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ ಸಂಪೂರ್ಣ ಮಾಹಿತಿಯನ್ನು ನೀಡುವ ಮೂಲಕ ಅವರಿಗೆ ಸಹಕರಿಸಬೇಕು. ನಿಖರ ಮಾಹಿತಿಯಿಂದ ಸರ್ಕಾರವು ಹೊಸ ಹೊಸ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಹಾಗೂ ಸಮಾಜದ ಅಂಚಿನವರಿಗೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ರಾಜ್ಯ ಸರ್ಕಾರ ಸರ್ವರಿಗೂ ಸಾಮಾಜಿಕ ನ್ಯಾಯ ಕಲ್ಪಿಸುವ ಮೂಲಕ ನಾಡಿನ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದಲೇ ಈ ಸಮೀಕ್ಷೆ ನಡೆಸುತ್ತಿದೆ. ಹೀಗಾಗಿ ಇದನ್ನು ಜನರು ಗಂಭೀರವಾಗಿ ಪರಿಗಣಿಸಬೇಕು ಎಂದು ಮೇಟಿ ಒತ್ತಿ ಹೇಳಿದರು.







