ಯಾದಗಿರಿ | ಮರ್ಯಾದೆ ಹತ್ಯೆ ಪ್ರಕರಣ ಖಂಡಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

ಯಾದಗಿರಿ: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಗೇಡು ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ರಾಜ್ಯ ಸಮಿತಿ ವತಿಯಿಂದ ಯಾದಗಿರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಇತರರಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ದಲಿತ ವಿವೇಕಾನಂದನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಮತ್ತು 4 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕ್ರಾಂತಿ ಅವರು, ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ದ್ವೇಷದ ಹಿನ್ನೆಲೆ 7 ತಿಂಗಳ ಗರ್ಭಿಣಿ ಮಹಿಳೆಯನ್ನು ಮರ್ಯಾದೆ ಹತ್ಯೆ ಹೆಸರಿನಲ್ಲಿ ಕೊಲೆ ಮಾಡಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದೆ ಎಂದು ತೀವ್ರವಾಗಿ ಖಂಡಿಸಿದರು. ಇಂತಹ ಮರ್ಯಾದೆ ಹತ್ಯೆಗಳು ಸಮಾಜದ ಮಾನವೀಯ ಮೌಲ್ಯಗಳಿಗೆ ಧಕ್ಕೆ ತರುವ ಕೃತ್ಯಗಳಾಗಿದ್ದು, ಬಸವಣ್ಣನ ಭೂಮಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ನಾಚಿಕೆಗೇಡು ಎಂದು ಹೇಳಿದರು.
ಈ ಪ್ರಕರಣಕ್ಕೆ ಕಾರಣಿಭೂತರಾದ ಪ್ರಕಾಶಗೌಡ ಪಾಟೀಲ್, ಪ್ರೀತಮಗೌಡ ಪಾಟೀಲ್, ಅರುಣಗೌಡ ಪಾಟೀಲ್, ಈರಪ್ಪ ಹಾಗೂ ಮುದಕಪ್ಪ ಇವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಜೊತೆಗೆ ಮರ್ಯಾದೆ ಹತ್ಯೆಗಳನ್ನು ತಡೆಯಲು ಸರ್ಕಾರ ಗಲ್ಲು ಶಿಕ್ಷೆಯಂತಹ ಕಠಿಣ ಕಾನೂನು ಜಾರಿಗೆ ತರಬೇಕು ಹಾಗೂ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಅಜೀಜಸಾಬ್ ಐಕೂರ್, ಮಹಾದೇವಪ್ಪ ಬಿಜಾಸಪೂರ, ಮಾನಪ್ಪ ಬಿಜಾಪೂರ, ಬಸವರಾಜ ಗೋನಾಲ, ದೇವಪ್ಪ ಗುಡ್ಡೆರ್, ಚಂದ್ರಕಾಂತ ಹಂಪಿನ್, ಮಲ್ಲಪ್ಪ ಉರುಸುಲ್, ನಿಂಗಪ್ಪ ಹಂಪಿನ್, ಉಮೇಶ್ ಲಿಂಗೇರಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.







