ಯಾದಗಿರಿ | ವಸತಿ ನಿಲಯದಲ್ಲಿ ಊಟ ಸೇವಿಸಿದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಯಾದಗಿರಿ: ಗುರುಮಠಕಲ್ ಪಟ್ಟಣದ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಊಟ ಸೇವಿಸಿದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ.
ರಾತ್ರಿ 7.30ರ ಸುಮಾರಿಗೆ ಚಿಕನ್, ಚಪಾತಿ, ಅನ್ನ ಸೇವಿಸಿದ ಬಳಿಕ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿನಿಯರು ಅಸ್ವಸ್ಥತಗೊಂಡಿದ್ದು, ಬಳಿಕ ಅವರನ್ನು ಗುರುಮಠಕಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ.
ಒಟ್ಟು 150 ವಿದ್ಯಾರ್ಥಿಗಳಲ್ಲಿ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿರುವುದರಿಂದ ಫುಡ್ ಪಾಯಿಸನ್ ಶಂಕೆ ವ್ಯಕ್ತವಾಗಿದೆ ಎಂದು ಚಿಕಿತ್ಸಕ ವೈದ್ಯರು ಹೇಳಿದ್ದಾರೆ.
ಘಟನೆಯ ಮಾಹಿತಿ ತಿಳಿದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ತಹಶೀಲ್ದಾರ್ ಹಾಗೂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಚಿಕಿತ್ಸಾ ವ್ಯವಸ್ಥೆ ಪರಿಶೀಲಿಸಿದ್ದಾರೆ.
ಗುರುಮಠಕಲ್ ಪೊಲೀಸ್ ಠಾಣೆ ಸಿಬ್ಬಂದಿಗಳು ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಹಾಸ್ಟೆಲ್‌ನ ಅಡಿಗೆ, ಸಂಗ್ರಹಣೆ ಹಾಗೂ ಸ್ವಚ್ಛತೆ ಕುರಿತು ಆಹಾರ ಸುರಕ್ಷತಾ ಇಲಾಖೆಯು ತಪಾಸಣೆ ಆರಂಭಿಸಿದೆ.







