ಯಾದಗಿರಿ | ಬಸವಣ್ಣನವರು ಸಾಮಾಜಿಕ ಸಮಾನತೆಗೆ ಹೋರಾಡಿದ ಮಹಾಚೇತನ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

ಯಾದಗಿರಿ: ಸಮಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ ವಿಶ್ವಗುರು ಬಸವಣ್ಣನವರು ಎಲ್ಲ ಸಮಾಜದ ಏಳ್ಗೆ ಮೂಲಕ ಸಮಾನತೆ ತರಲು ಹೋರಾಡಿದರು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಇಂದು ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿ ಅವರು ಮಾತನಾಡಿದರು.
ಹನ್ನೆರಡನೇಯ ಶತಮಾನದಲ್ಲಿಯೇ ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದ ಶ್ರೀ ಬಸವಣ್ಣನವರು ಅನುಭವ ಮಂಟಪದ ಮೂಲಕ ಎಲ್ಲ ಸಮಾಜದವರನ್ನು ಒಗ್ಗೂಡಿಸಿ ಸಮಾನತೆ ತರಲು ಹೋರಾಡಿದರು ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಲಲಿತಾ ಅನಪುರ ಅವರು ಮಾತನಾಡಿ, ಎಲ್ಲ ಜಾತಿ, ಧರ್ಮದವರನ್ನು ಅನುಭವ ಮಂಟಪ ಮೂಲಕ ಒಟ್ಟುಗೂಡಿಸಿದ ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಹನ್ನೆರಡನೇ ಶತಮಾನದಲ್ಲಿಯೇ ಸಮಾನತೆ ಸಾರಿದ ಬಸವಣ್ಣನವರು ವಿಶ್ವಕ್ಕೆ ಸಮಾನತೆ ಪರಿಕಲ್ಪನೆ ತೋರಿ, ವಿಶ್ವಗುರು ಆಗಿದ್ದಾರೆ. ಸಮಾನತೆ, ಕಾಯಕವೇ ಕೈಲಾಸ, ಸಾಮಾಜಿಕ ಮೌಲ್ಯಗಳನ್ನು ಎತ್ತಿಹಿಡಿದ ಸಮಾಜ ಸುಧಾರಕರಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ ಅವರು, ಬಸವಣ್ಣನವರ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಇಂದಿನ ಯುವಜನಾಂಗಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜಸೇವಕರಾದ ವಿಶ್ವನಾಥ್ ಕಾಜಗಾರ್, ರಮೇಶ್ ದೊಡಮನಿ, ಸದಾಶಿವಪ್ಪ ಚಂದನಕೇರಿ, ಸಿದ್ದಪ್ಪ ಹೊಟ್ಟಿ, ಅನ್ನಪೂರ್ಣ ಜವಳಿ, ಅನ್ನಪೂರ್ಣ ಸಿ.ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ ಅಖಿಲಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಡಾ.ಸಿದ್ದರಾಜ ರೆಡ್ಡಿ ಕಾರ್ಯಕ್ರಮ ನಿರ್ವಹಿಸಿ ಕೊನೆಯಲ್ಲಿ ವಂದಿಸಿದರು.







