Yadagiri | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ : ಅಜ್ಜನ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ಸ್ವಂತ ಮೊಮ್ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿರುವ ಘಟನೆ ಸುರಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಸೆ. 23ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶರಣಪ್ಪ ಟಣಕೇದಾರ್ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಚೂರಿ ತೋರಿಸಿ ಬೆದರಿಸಿದ್ದಲ್ಲದೆ, ಕೊಲೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ.
ಘಟನೆ ಗಮನಿಸಿದ ವ್ಯಕ್ತಿಯೊಬ್ಬರು ಕೂಡಲೇ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯ ತಾಯಿ ಬೆಂಗಳೂರಿಗೆ ತೆರಳಿದ್ದ ವೇಳೆ ಬಾಲಕಿಯನ್ನು ಅಜ್ಜ-ಅಜ್ಜಿಯ ಮನೆಯಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಕೃತ್ಯಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.
ವಿಷಯ ತಿಳಿದ ಬಳಿಕ ಬಾಲಕಿಯನ್ನು ಚಿಕಿತ್ಸೆ ಹಾಗೂ ರಕ್ಷಣೆಯ ಹಿನ್ನೆಲೆಯಲ್ಲಿ ಬಾಲಮಂದಿರಕ್ಕೆ ರವಾನಿಸಲಾಗಿದೆ.
ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ 115(2), 109(1) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






