Yadagiri | ರೈತರಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಿ : ಡಾ.ಭೀಮಣ್ಣ ಮೇಟಿ ಆಗ್ರಹ

ಯಾದಗಿರಿ : ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಶೇಷ ಅನುದಾನ ಪ್ಯಾಕೇಜ್ ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಪರಿಣಾಮ ರಾಜ್ಯದ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.
ರಾಜ್ಯದಿಂದ ಪ್ರತಿ ವರ್ಷ ಕೇಂದ್ರಕ್ಕೆ ಲಕ್ಷಾಂತರ ಕೋಟಿ ರೂಪಾಯಿ ತೆರಿಗೆ ಪಾವತಿಯಾಗುತ್ತಿದೆ. ಆದರೆ ಈ ಬಾರಿ ಮಳೆಯ ಕೊರತೆಯಿಂದ ರೈತರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಕೃಷಿ ಸಂಪೂರ್ಣವಾಗಿ ಹಾನಿಗೊಳಗಾಗಿದೆ ಎಂದು ಹೇಳಿದರು.
ಸಾಲ ಮಾಡಿ ಕೃಷಿ ನಡೆಸಿರುವ ರೈತರು ಈಗ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಯಾವುದೇ ವಿಳಂಬ ಮಾಡದೆ ಕೇಂದ್ರ ಸರ್ಕಾರ ವಿಶೇಷ ಪರಿಹಾರ ಘೋಷಿಸಬೇಕು. ರೈತರಿಗೆ ತಕ್ಷಣ ಆರ್ಥಿಕ ನೆರವು ಒದಗಿಸುವುದು ಅಗತ್ಯ ಎಂದು ತಿಳಿಸಿದರು.
ಅನ್ನದಾತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಕೈ ಹಿಡಿಯುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಡಾ. ಭೀಮಣ್ಣ ಮೇಟಿ ಎಚ್ಚರಿಕೆ ನೀಡಿದ್ದಾರೆ.






