ಯಾದಗಿರಿ| ದಲಿತರ ಐಕ್ಯತೆಗೆ ಸ್ವಾಭಿಮಾನದ ಸಂಕಲ್ಪ: ಐಕ್ಯತಾ ಸಮಾವೇಶದ ಕರಪತ್ರ ಬಿಡುಗಡೆ

ಹುಣಸಗಿ: ದಲಿತ ಸಮುದಾಯದ ಐಕ್ಯತೆ, ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಬಲಪಡಿಸುವ ಉದ್ದೇಶದಿಂದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಸಮಿತಿಯ ವತಿಯಿಂದ ಆಯೋಜಿಸಿರುವ ದಲಿತರ ಐಕ್ಯತಾ ಸಮಾವೇಶದ ಕರಪತ್ರಗಳನ್ನು ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜಾ ವೇಣುಗೋಪಾಲ ನಾಯಕ, ದಲಿತ ಸಮುದಾಯದಲ್ಲಿ ಒಗ್ಗಟ್ಟು ಮೂಡಿಸುವುದು, ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವುದು ಹಾಗೂ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹೋರಾಟಕ್ಕೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಐಕ್ಯತಾ ಸಮಾವೇಶ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಸ್ವಾಭಿಮಾನದ ಮೌಲ್ಯಗಳನ್ನು ಬಿತ್ತುವ ಆಶಯದೊಂದಿಗೆ ಸಮಾವೇಶ ಆಯೋಜಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹಾಗೂ ದಲಿತ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ದಲಿತ ಸಮುದಾಯದ ಐಕ್ಯತೆಯನ್ನು ಬಲಪಡಿಸುವುದು ಹಾಗೂ ಸ್ವಾಭಿಮಾನದ ಹೋರಾಟಕ್ಕೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಕರಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.






