ಯಾದಗಿರಿ | ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸೂಚನೆ

ಯಾದಗಿರಿ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ರಾಹುಲ್ ಪಾಂಡ್ವೆ, ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಗಳನ್ನು ಪರಿಹರಿಸಲು ತಕ್ಷಣ ಸಹಾಯವಾಣಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ವಾರಕ್ಕೊಮ್ಮೆ ಪರೀಕ್ಷಿಸಿ, ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಟ್ಟಡ ಪರವಾನಗಿ, ಆಸ್ತಿ ತೆರಿಗೆ ಹಾಗೂ ವ್ಯಾಪಾರ ಪರವಾನಗಿಗಳಿಗೆ ಸಂಬಂಧಿಸಿದ ಬಾಕಿ ತೆರಿಗೆಗಳನ್ನು ಶೀಘ್ರವಾಗಿ ಸಂಗ್ರಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.






