ಯಾದಗಿರಿ | ಬಸವ ಜಯಂತ್ಯೋತ್ಸವ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ನಗರಸಭೆ, ವೀರಶೈವ ಮಹಾಸಭಾ,ವಿವಿಧ ಸಂಘ ಸಂಸ್ಥೆಗಳು ಹಾಗೂ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಎ.30ರಂದು ಬಸವ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬಸವ ಜಯಂತ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಎ. 30 ರ ಬೆಳಿಗ್ಗೆ 10:30 ಗಂಟೆಗೆ ಈ ಜಯಂತ್ಯೋತ್ಸವವನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ಅವಶ್ಯಕ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಂದು ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ, ವೇದಿಕೆ ಸಿದ್ದತೆ ಮಾಡಿಕೊಳ್ಳುವಂತೆ ಹಾಗೂ ನುರಿತ ಉಪನ್ಯಾಸಕರನ್ನು ಆಹ್ವಾನಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಂಜೆ ವೀರಶೈವ ಕಲ್ಯಾಣ ಮಂಟಪದಿಂದ ಆರಂಭಿಸುವ ಮೆರವಣಿಗೆ ಮಾರ್ಗದ ಕುರಿತು ಮುಂಚಿತವಾಗಿ ತಿಳಿಸಬೇಕು. ಜಿಲ್ಲಾ, ಗ್ರಾಮ ಪಂಚಾಯತ್, ತಾಲೂಕು ಮಟ್ಟ ಹಾಗೂ ಶಾಲಾ, ಕಾಲೇಜು, ಕಚೇರಿಯಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ಎರಡು ವರ್ಷಗಳಲ್ಲಿ ಲೋಕಸಭಾ, ವಿಧಾನ ಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಮಹನೀಯರ ಜಯಂತಿ ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಕಾರ್ಯಕ್ರಮವು ಶಿಸ್ತುಬದ್ದವಾಗಿ ನಡೆಯಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಜಯಂತಿಯಂದು ಸೂಕ್ತ ಪೊಲೀಸ್ ಬಂದೋಬಸ್ತ್, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲು ಅವರು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರು ಸುಭಾಷ್ ಚಂದ್ರ ಕೌಲಗಿ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ, ಪ್ರಧಾನ ಕಾರ್ಯದರ್ಶಿ ಡಾ.ಸಿದ್ದರಾಜ ರೆಡ್ಡಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ವೀರಶೈವ ಸಮಾಜದ ಅಧ್ಯಕ್ಷ ಅಯ್ಯಣ್ಣ ಹುಂಡೆಕಾರ್, ರೈತ ಮುಖಂಡ ಚನ್ನಾರೆಡ್ಡಿಗೌಡ, ವೀರಶೈವ ಮಹಾಸಭಾ ಯುವ ಅಧ್ಯಕ್ಷ ಸುರೇಶ್ ಜಾಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.