ಯಾದಗಿರಿ| 71 ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಯಾದಗಿರಿ: ಕರ್ನಾಟಕ ರಾಜ್ಯ ಶಾಂತಿ, ಸೌಹಾರ್ದ ಹಾಗೂ ನೆಮ್ಮದಿಯಿಂದ ಬೆಳಗಬೇಕು.ಈ ನಾಡಿನ ನೆಲ, ಜಲ, ಭಾಷೆ ಹಾಗೂ ಸಂಸ್ಕೃತಿಯ ಅಸ್ತಿತ್ವವನ್ನು ಉಳಿಸಿ ಬೆಳೆಸಬೇಕೆಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಶರಣಪ್ರಕಾಶ್ ಪಾಟೀಲ್ ಕರೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 71 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ವಿವಿಧ ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ನಮ್ಮ ನಾಡಿನ ನೆಲ,ಜಲ, ಸಂಸ್ಕೃತಿ ಹಾಗೂ ಕನ್ನಡ ಭಾಷೆಯ ಉಳಿವಿಗಾಗಿ ಶ್ರಮಿಸಿ, ಸಾಂಸ್ಕೃತಿಕ ಕೊಡುಗೆ ನೀಡಿದ ಮಹಾನ್ ಚೇತನರಿಗೆ ನಮಿಸುವುದಾಗಿ ತಿಳಿಸಿದ ಅವರು, ಕರ್ನಾಟಕದ ಏಕೀಕರಣ, ನೆಲ, ಜಲ, ಭಾಷೆ ಸಂರಕ್ಷಣೆಗೆ ಕೊಡುಗೆ ನೀಡಿರುವವರನ್ನು ಈ ಶುಭ ಸಂದರ್ಭದಲ್ಲಿ ಸ್ಮರಿಸುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಹಾಗೂ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಇವುಗಳ ಲಾಭ ಜನರ ಮನೆಬಾಗಿಲಿಗೆ ತಲುಪಿಸುತ್ತಿದೆ. ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ 108.23 ಕೋ.ರೂ ಗಳ ಸಹಾಯಧನ ಒದಗಿಸಿದೆ. 1.52 ಲ. ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಪೂರ್ಣಗೊಳಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 257.33 ಕೋ.ರೂ ಗಳನ್ನು ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಶಕ್ತಿ ಯೋಜನೆಯಡಿ 9.16 ಕೋ.ಜನ ಮಹಿಳಾ ಪ್ರಯಾಣಿಕರು ಯಾದಗಿರಿ ವಿಭಾಗದ ವಾಹನಗಳಲ್ಲಿ ಪ್ರಯಾಣಿಸಿದ್ದು,ಪ್ರಯಾಣದ ಮೊತ್ತ 332.26ಕೋ.ರೂ ಗಳಷ್ಟಾಗಿದೆ. ಗೃಹ ಲಕ್ಷ್ಮೀ ಯೋಜನೆಯಡಿ 1589.38 ಕೋ.ರೂ ವೆಚ್ಚ ಭರಿಸಲಾಗಿದೆ. ಯುವನಿಧಿ ಯೋಜನೆಯಡಿ 40.17 ಕೋ.ರೂ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಸ್ಯಾಮ್ಸನ್ ಮಾಳಿಕೇರಿ, ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್,ಅಪರ್ ಜಿಲ್ಲಾಧಿಕಾರಿ ರಮೇಶ್ ಕೋಲಾರ, ಸಿದ್ದಪ್ಪ ಹೊಟ್ಟಿ,ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು ಗಮನ ಸೆಳೆದವು.






