ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಹನುಮಂತ್ ನಾಯಕ್ ಆಗ್ರಹ

ಸುರಪುರ: ಸುರಪುರ ತಾಲೂಕಿನಲ್ಲಿ ನಡೆಯುವ ಅಕ್ರಮ ಮರಳು ಗಣಿಗಾರಿಕೆಯನ್ನು ಕೂಡಲೇ ತಡೆಯುವಂತೆ ಬಿಜೆಪಿ ಮುಖಂಡ ಹನುಮಂತ್ ನಾಯಕ್ ಬಬ್ಲುಗೌಡ ಆಗ್ರಹಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹನುಮಂತ್ ನಾಯಕ್, ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಗಮನಿಸಿದರೆ ಪೊಲೀಸ್ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಅಕ್ರಮ ಮರಳು ತುಂಬಿಕೊಂಡು ಓಡಾಡುವ ಟಿಪ್ಪರ್‌ಗಳಿಂದ ರಸ್ತೆಗಳು ಸಂಪೂರ್ಣವಾಗಿ ಹಾನಿಯಾಗಿದೆ. ಈ ರಸ್ತೆಗಳಲ್ಲಿ ವಾಹನಗಳ ಓಡಾಟ ತುಂಬಾ ಕಷ್ಟಕರವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದರೂ, ಪೊಲೀಸ್ ಇಲಾಖೆ, ತಹಶೀಲ್ದಾರ್, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಇದನ್ನು ತಡೆಯುತ್ತಿಲ್ಲ ಎನ್ನುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಅಕ್ರಮ ಮರಳು ಗಣಿಗಾರಿಕೆ ನಿಲ್ಲಬೇಕು. ಇಲ್ಲವಾದಲ್ಲಿ ಎಲ್ಲಾ ಗ್ರಾಮಗಳ ಸಾರ್ವಜನಿಕರನ್ನು ಜಾಗೃತಿಗೊಳಿಸಿ ನಿರಂತರ ಹೋರಾಟವನ್ನು ನಡೆಸಲಾಗುವುದು ಎಂದು ಹೇಳಿದರು.
Next Story





