Yadagiri | ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸೆ.20ರಂದು ಕನ್ನಡ ಸಾಹಿತ್ಯ ಪರಿಷತ್‌ನಿಂದ ಸನ್ಮಾನ

ಯಾದಗಿರಿ : ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಸೆಪ್ಟೆಂಬರ್ 20ರಂದು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಎಸ್. ಹೊಟ್ಟಿ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಾಲಿನಲ್ಲಿ ಜಿಲ್ಲೆಯ 13 ಶಿಕ್ಷಕರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿ ಸಭಾಂಗಣದಲ್ಲಿ ಸನ್ಮಾನ ಮಾಡಲಾಗುವುದು ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಶಿಕ್ಷಣ ಇಲಾಖೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಅದೇ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದಲೂ ಅವರನ್ನು ಗೌರವಿಸುವ ಉದ್ದೇಶ ಹೊಂದಿದ್ದು, ಇದು ಮುಂದಿನ ಪೀಳಿಗೆಯ ಶಿಕ್ಷಕರಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು.
ಸಮಾರಂಭದಲ್ಲಿ ವಿಶೇಷ ಉಪನ್ಯಾಸಕರಾಗಿ ಶಾಂತಗೌಡ ಪಾಟೀಲ್ ಭಾಗವಹಿಸಲಿದ್ದು, ನಿವೃತ್ತ ಶಿಕ್ಷಕರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡುವ ಉದ್ದೇಶದಿಂದ ಸಮಿತಿಯೊಂದನ್ನು ರಚಿಸಲಾಗುವುದು. ವಿಶೇಷ ಉಪನ್ಯಾಸಕರ ಆಯ್ಕೆ ಸೇರಿದಂತೆ ವಿವಿಧ ವಿಷಯಗಳನ್ನು ಇದೇ ಸಮಿತಿ ಪರಿಶೀಲಿಸಲಿದೆ ಎಂದು ಸಿದ್ದಪ್ಪ ಹೊಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಸುಭಾಷ್ ಚಂದ್ರ ಕೌಲಗಿ, ನೂರಂದಪ್ಪ ಲೇವಡಿ, ನಾಗಪ್ಪ ಸಜ್ಜನ್, ಬಸವರಾಜ್ ಮೋಟ್ನಳ್ಳಿ ಹಾಗೂ ಚೆನ್ನಪ್ಪ ಸಾಹು ಠಾಣಗುಂದಿ ಉಪಸ್ಥಿತರಿದ್ದರು.






