Yadgiri | ಯಡಿಯೂರಪ್ಪ ಅಭಿಮಾನೋತ್ಸವದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ : ರಾಚನಗೌಡ ಮುದ್ನಾಳ

ಯಾದಗಿರಿ: ಚಿತ್ರದುರ್ಗದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ರಾಜಕಾರಣದ ಅಭಿಮಾನೋತ್ಸವ ಕಾರ್ಯಕ್ರಮದಿಂದ ಯಾದಗಿರಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯಡಿಯೂರಪ್ಪ ಅವರು ಪರಿಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಬಲಪಡಿಸಿದ್ದು, ಮುಖ್ಯಮಂತ್ರಿಯಾಗಿ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರನ್ನು ಬಿಜೆಪಿ ಎಂದಿಗೂ ಮರೆಯುವುದಿಲ್ಲ ಎಂಬ ವಿಶ್ವಾಸ ಕಾರ್ಯಕರ್ತರಲ್ಲಿ ಮೂಡಿದೆ. ಅಧಿಕಾರಕ್ಕೆ ಬಂದಾಗ ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂಬ ನಂಬಿಕೆ ಬಲವಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ಪೈಪೋಟಿ ನಡೆಯುತ್ತಿದ್ದು, ಅದು ರಾಜ್ಯದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂದು ಆರೋಪಿಸಿದರು.
ರಾಜ್ಯದ ಹಲವು ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಪಂಚ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡುತ್ತಿದ್ದರೂ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂದು ಹೇಳಿದರು.
ಆಡಳಿತ ಯಂತ್ರ ಕುಸಿದ ಪರಿಣಾಮ ಜನರ ಸರ್ಕಾರಿ ಕೆಲಸಗಳು ಸಮಯಕ್ಕೆ ಆಗುತ್ತಿಲ್ಲ. ಸರ್ಕಾರದ ಕಾರ್ಯವೈಖರಿಯಿಂದ ಜನರಲ್ಲಿ ಭ್ರಮನಿರಸನ ಉಂಟಾಗಿದೆ ಎಂದು ಆರೋಪಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಯುತ್ತಿದ್ದು, ಅದು ಜನರಲ್ಲಿ ಸಕಾರಾತ್ಮಕ ಪರಿಣಾಮ ಬೀರಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಬಲವಾಗುತ್ತಿದ್ದು, ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಪ್ರತಿಯೊಂದು ಬೂತ್ ಮಟ್ಟಕ್ಕೆ ಭೇಟಿ ನೀಡಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.






