Yadgiri | ದೆಹಲಿಯಲ್ಲಿ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ಆರೋಪ : ಪೊಲೀಸರ ಬಂಧನಕ್ಕೆ ಆಗ್ರಹ

ಯಾದಗಿರಿ: ದೆಹಲಿಯಲ್ಲಿ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೊಲೀಸರು ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸುವುದರ ಜೊತೆಗೆ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾಧಿಕಾರಿ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ ವರದಿಗೆ ತೆರಳಿದ್ದ ಮೂವರು ಪತ್ರಕರ್ತೆಯರಿಗೆ ಪೊಲೀಸರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ಮಹಿಳಾ ಪತ್ರಕರ್ತೆಯರನ್ನು ಎಳೆದಾಡಿ, ಅವರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಪೊಲೀಸರ ವಿರುದ್ಧ ದೂರು ದಾಖಲಿಸಲು ತೆರಳಿದ್ದ ಪತ್ರಕರ್ತೆಯರನ್ನು ಗಂಟೆಗಟ್ಟಲೆ ಠಾಣೆಯಲ್ಲಿ ಕಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಪತ್ರಿಕಾ ರಂಗದ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಮಾರಕ ಬೆಳವಣಿಗೆಯಾಗಿದ್ದು, ಪತ್ರಕರ್ತರು ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೊಲೀಸರನ್ನು ಕೂಡಲೇ ಬಂಧಿಸಬೇಕು. ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು. ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಇಡೀ ಸಮಾಜವೇ ತಲೆತಗ್ಗಿಸುವಂತಹ ವಿಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರತೆ ನೀಡಬೇಕಾದ ಪೊಲೀಸರಿಂದಲೇ ಇಂತಹ ಕೃತ್ಯ ನಡೆದಿರುವುದು ನಿಜಕ್ಕೂ ಬೆದರಿಸುವಂತಹ ಬೆಳವಣಿಗೆಯಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದು ಹೇಳಿದ್ದಾರೆ.
ದೆಹಲಿ ಸರ್ಕಾರ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕು. ಆರೋಪಿಗಳೇ ಪೊಲೀಸರು ಆಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ನೀಡಿರುವವರಿಗೆ ನ್ಯಾಯ ದೊರೆಯುವ ಬಗ್ಗೆ ಆತಂಕವಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ನ್ಯಾಯಾಂಗ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.






