Yadgiri | NEET ಪರೀಕ್ಷೆ ರದ್ದು: ಕೇಂದ್ರ ಸರ್ಕಾರ ವಿರುದ್ಧ ಡಾ.ಭೀಮಣ್ಣ ಮೇಟಿ ವಾಗ್ದಾಳಿ

ಯಾದಗಿರಿ: ನೀಟ್ ಪರೀಕ್ಷೆ ರದ್ದಾಗಿರುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲವಾದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕೆಂಬ ಕನಸು ಹೊತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೇ 3ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿಬಂದಿದ್ದು, ಇದು ಕೇಂದ್ರ ಸರ್ಕಾರದ ದೊಡ್ಡ ಹಗರಣವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ನೀಟ್ ಪರೀಕ್ಷೆಯಲ್ಲಿ ಒಂದಲ್ಲಾ ಒಂದು ಅಕ್ರಮಗಳು ನಡೆಯುತ್ತಲೇ ಇವೆ ಎಂದು ಹೇಳಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಕೋಟ್ಯಂತರ ರೂಪಾಯಿ ಅಕ್ರಮ ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಿಂದ ಕೂಡಿದೆ. ಇದರಿಂದ ವಿದ್ಯಾರ್ಥಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ ಎಂದು ಆರೋಪಿಸಿದರು.
ಈ ಪ್ರಕರಣಕ್ಕೆ ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆ ಹೊತ್ತು, ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕು. ಇದು ಕೇಂದ್ರದ ಅಸಮರ್ಥ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.
ಮತ್ತೊಮ್ಮೆ ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕವಾಗಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ವಿದ್ಯಾರ್ಥಿಗಳು ಈಗಾಗಲೇ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಮರು ಪರೀಕ್ಷೆಯಿಂದ ಇನ್ನಷ್ಟು ಕುಗ್ಗುವ ಸಾಧ್ಯತೆಯಿದೆ ಎಂದರು.
“ಪರೀಕ್ಷಾ ಪೇ ಚರ್ಚೆ” ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಗೊತ್ತಾಗಲಿಲ್ಲವೇ? ಹೇಳುವುದೊಂದು, ಮಾಡುವುದು ಮತ್ತೊಂದು. ಭ್ರಷ್ಟಾಚಾರವೇ ಕೇಂದ್ರ ಸರ್ಕಾರದ ದೊಡ್ಡ ಸಾಧನೆಯಾಗಿದ್ದು, ನೀಟ್ ಹಗರಣವೇ ಅದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜಸ್ಥಾನ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋಚಿಂಗ್ ಸೆಂಟರ್‌ಗಳ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಜಾಲ ಇರುವ ಸಾಧ್ಯತೆಯಿದೆ. ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.






