ಯಾದಗಿರಿ | ಜೂ.14ರಂದು ಮುಖ್ಯಮಂತ್ರಿಗಳಿಂದ ʼಆರೋಗ್ಯ ಆವಿಷ್ಕಾರʼ ಯೋಜನೆಗಳಿಗೆ ಶಂಕುಸ್ಥಾಪನೆ
ಕಾರ್ಯಕ್ರಮದ ಯಶಸ್ಸಿಗೆ ಸಾಂಘಿಕವಾಗಿ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಯಾದಗಿರಿ: ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.14 ರಂದು ಬೆಳಿಗ್ಗೆ 11 ಗಂಟೆಗೆ ಕೆ.ಕೆ.ಆರ್.ಡಿ.ಬಿ ಮಂಡಳಿಯ ʼಆರೋಗ್ಯ ಆವಿಷ್ಕಾರʼ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸಾಂಘಿಕವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜೊತೆಗೆ ರಾಜ್ಯ ಸಭೆಯ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಸೇರಿದಂತೆ ಪ್ರದೇಶದ ಸಚಿವರು, ಶಾಸಕರು-ಸಂಸದರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ, ಶಿಷ್ಟಾಚಾರದಂತೆ ಗಣ್ಯರಿಗೆ ಆತಿಥ್ಯ ನೀಡಬೇಕು ಎಂದರು.
ಕೆ.ಕೆ.ಆರ್.ಡಿ.ಬಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜರುಗುವ ವಿಭಾಗ ಮಟ್ಟದ ಕಾರ್ಯಕ್ರಮ ಇದಾಗಿರುವುದರಿಂದ ಎಲ್ಲಿಯೂ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕೇವಲ ನಾಲ್ಕೆ ದಿನ ಬಾಕಿ ಇರುವುದರಿಂದ ಯುದ್ದೋಪಾದಿಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಬೇಕು. ಇಲ್ಲಿ ಯಾವುದೇ ರೀತಿಯ ಅಲಕ್ಷ್ಯತನ ಸಹಿಸುವುದಿಲ್ಲ ಎಂದ ಡಿ.ಸಿ. ಅವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಸುಗಮ ಸಂಚಾರಕ್ಕೆ ಪಾರ್ಕಿಂಗ್ ಸ್ಥಳ ಗುರುತಿಸಬೇಕು. ಭದ್ರತಾ ದೃಷ್ಠಿಯಿಂದ ವೇದಿಕೆ ಕಾರ್ಯಕ್ರಮದಲ್ಲಿ ಡಿ.ಝೋನ್ ಸ್ಥಾಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕು. ವೇದಿಕೆಯ ಮೇಲುಸ್ತುವಾರಿ ಲೋಕೋಪಯೋಗಿ ಇಲಾಖೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಸೈನೇಜ್ ಬೋರ್ಡ್, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು.
ಜಿಲ್ಲೆಗೆ ಮುಖ್ಯಮಂತ್ರಿ ಸೇರಿ ಗಣ್ಯರು ಆಗಮಿಸುವುದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ. ತಮಗೆ ನೀಡಲಾದ ಜವಾಬ್ದಾರಿ ಚಾಚುತಪ್ಪದೆ ನಿರ್ವಹಿಸಬೇಕು. ಕೆಲಸದಲ್ಲಿ ಯಾವುದೇ ರೀತಿಯ ಅಲಕ್ಷ್ಯತನ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಡಿ.ಸಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಲವೀಶ್ ಓರಡಿಯಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.