Yadgiri | ರಾಮಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪದ ಸಮಗ್ರ ತನಿಖೆಗೆ ಕಾಂಗ್ರೆಸ್ ಒತ್ತಾಯ

ಯಾದಗಿರಿ: ಅಯೋಧ್ಯೆಯ ರಾಮಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪದ ಪ್ರಕರಣದಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ರಾಜೀನಾಮೆ ನೀಡಿರುವ ಚಂಪತ್ ರಾಯ್ ಹಾಗೂ ಡಾ. ಅನಿಲ್ ಮಿಶ್ರಾ ಅವರ ಪಾತ್ರ ಸೇರಿದಂತೆ ಸಂಪೂರ್ಣ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಜಿಲ್ಲಾ ಪ್ರಚಾರ ಸಮಿತಿ ಉಸ್ತುವಾರಿ ಆದರ್ಶ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರೂ, ಇಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಕಳವಳಕಾರಿ ಎಂದು ಹೇಳಿದರು.
ರಾಮಮಂದಿರದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆ ಹಣದ ದುರ್ಬಳಕೆ ಆರೋಪದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಇಷ್ಟೊಂದು ದೊಡ್ಡ ಆರೋಪಗಳಿದ್ದರೂ ಸಿಬಿಐ ಅಥವಾ ಇಡಿ ತನಿಖೆ ನಡೆದಿಲ್ಲ ಎಂದು ಅವರು ಆರೋಪಿಸಿದರು.
ಅಲ್ಲದೆ, ತಿರುಪತಿ ಮಾದರಿಯಲ್ಲಿ ಅಯೋಧ್ಯೆ ರಾಮಮಂದಿರದ ಆಡಳಿತವನ್ನು ಐಎಎಸ್ ಅಧಿಕಾರಿಗಳ ಮೂಲಕ ನಡೆಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಮಾತನಾಡಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗಳನ್ನು ಟೀಕಿಸಿ, ಆರೋಪಗಳ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ ಮಾತನಾಡಿ, ನ್ಯಾಯಾಲಯದ ಆದೇಶದಂತೆ ರಾಮಮಂದಿರ ಟ್ರಸ್ಟ್ ರಚನೆಯಾಗಿದ್ದು, ದೇಣಿಗೆ ಹಣದ ಬಳಕೆಯ ಬಗ್ಗೆ ಪಾರದರ್ಶಕತೆ ಇರಬೇಕು. ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪ ಬಿಳ್ಹಾರ, ಪಕ್ಷದ ರಾಘವೇಂದ್ರ ಮಾನಸಗಲ್, ಬಾಪುಗೌಡ, ಸುರೇಶಗೌಡ ಇನ್ನಿತರರಿದ್ದರು.






