Yadgiri | ನಕಲಿ ಬಯೋಮೆಟ್ರಿಕ್ ಹಾಜರಾತಿ ; ಪಿಡಿಒಗಳಿಗೆ ನೋಟಿಸ್ : ಜಿಲ್ಲಾ ಪಂಚಾಯತ್ ಸಿಇಓ ಲವೀಶ್ ಒರಡಿಯಾ

ಯಾದಗಿರಿ : ಕುಡಿಯುವ ನೀರಿನ ಪೂರೈಕೆ, ಚರಂಡಿ ಸ್ವಚ್ಛತೆ, ನೀರಿನ ಮಾದರಿ ಪರೀಕ್ಷೆ, ಕರ ವಸೂಲಾತಿ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಯೋಜನೆ ಅನುಷ್ಠಾನದಲ್ಲಿ ಯಾವುದೇ ಲೋಪದೋಷವಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರೇಡ್-1 ಮತ್ತು ಗ್ರೇಡ್-2 ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ತುರ್ತು ಅನಿರೀಕ್ಷಿತ ಸಭೆ ನಡೆಸಿ ಅವರು ಮಾತನಾಡಿದರು.
ಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ, ಚರಂಡಿಗಳ ಸ್ವಚ್ಛತೆ, ನೀರಿನ ಮಾದರಿಗಳ ಪರೀಕ್ಷೆ, ಕರ ವಸೂಲಾತಿ ಹಾಗೂ ಮನರೇಗಾ ಯೋಜನೆಯಡಿ ಮಾನವ ದಿನಗಳ ಸೃಷ್ಟಿ ಕುರಿತು ಚರ್ಚಿಸಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಇದೇ ವೇಳೆ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳ ಹಾಜರಾತಿ ಕುರಿತು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಕುರಿತು ದಿಢೀರ್ ಪರಿಶೀಲನೆ ನಡೆಸಲಾಯಿತು.
ಪರಿಶೀಲನೆಯ ವೇಳೆ ಸುಮಾರು ಶೇ.80ರಷ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಕಲಿ ಬಯೋಮೆಟ್ರಿಕ್ ಹಾಜರಾತಿ ಹಾಕಿರುವುದು ಬೆಳಕಿಗೆ ಬಂದಿದೆ ಎಂದು ಸಿಇಒ ಲವೀಶ್ ಒರಡಿಯಾ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿವರಣೆ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರೇಡ್-1 & ಗ್ರೇಡ್ 2 ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ ಹಾಗೂ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.






