Yadgiri | ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತಾವರಣ: ಡಾ.ಭೀಮಣ್ಣ ಮೇಟಿ

ಯಾದಗಿರಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಮತದಾರರ ಒಲವು ಹೆಚ್ಚಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯರಾಗಿದ್ದ ಅವಧಿಯಲ್ಲಿ ಬಿಜೆಪಿಯ ಶಶಿಲ್ ನಮೋಶಿ ಅವರು ಹೇಳಿಕೊಳ್ಳುವಂತಹ ಯಾವುದೇ ಕೆಲಸ ಮಾಡಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಿಲ್ಲ. ಹೀಗಾಗಿ ಅವರ ವಿರುದ್ಧ ಕ್ಷೇತ್ರದಲ್ಲಿ ವಿರೋಧಿ ಅಲೆ ಪ್ರಬಲವಾಗಿದೆ ಎಂದು ಹೇಳಿದರು.
ನಮೋಶಿ ಅವರ ಸಾಧನೆ ಸಂಪೂರ್ಣ ಶೂನ್ಯವಾಗಿದೆ. ಅವರ ಕಾರ್ಯವೈಖರಿಯಿಂದ ಕ್ಷೇತ್ರದ ಮತದಾರರು ಬೇಸರಗೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಡಾ. ಭೀಮಣ್ಣ ಮೇಟಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ನಿರುದ್ಯೋಗ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಯುವನಿಧಿ ಯೋಜನೆ ಆರಂಭಿಸಿದ್ದು, ಇದರಿಂದ ಅನೇಕ ಯುವಜನರಿಗೆ ಅನುಕೂಲವಾಗಿದೆ. ಆದರೆ, ಬಿಜೆಪಿ ಕೇವಲ ಸುಳ್ಳು ಆಶ್ವಾಸನೆಗಳನ್ನು ನೀಡಿದೆ. ಈ ಬಾರಿ ಮತದಾರರು ಬಿಜೆಪಿಯ ಭರವಸೆಗಳನ್ನು ನಂಬುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು.
ಇದಲ್ಲದೆ, ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದ ಶರಣಪ್ಪ ಮಟ್ಟೂರು ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಹೀಗಾಗಿ ಮತದಾರರು ಅವರ ಪರ ಒಲವು ತೋರುತ್ತಿದ್ದಾರೆ. ಈ ಬಾರಿ ಅವರು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಡಾ. ಭೀಮಣ್ಣ ಮೇಟಿ ತಿಳಿಸಿದರು.






