Yadgiri | ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಶರಣಗೌಡ ಕಂದಕೂರ ಚಾಲನೆ

ಯಾದಗಿರಿ: ತೆಲಂಗಾಣ ಗಡಿಭಾಗದ ಸೈದಾಪುರ ಪಟ್ಟಣದ ವಿದ್ಯಾರ್ಥಿಗಳಿಗೆ ಕ್ರೀಡಾ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಸರ್ಕಾರಿ ಜಮೀನು ಗುರುತಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದ್ದಾರೆ.
ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದ ಸುತ್ತಮುತ್ತ ಕನಿಷ್ಠ ಮೂರು ಎಕರೆ ಸರ್ಕಾರಿ ಜಮೀನು ಗುರುತಿಸಿ ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ದೈಹಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳನ್ನು ಕ್ರೀಡೆಗಳತ್ತ ಸೆಳೆಯಲು ಸರ್ಕಾರ ಹೋಬಳಿ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದ್ದು, ಪ್ರತಿವರ್ಷ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶರಣೀಕ ಕುಮಾರ ದೋಕಾ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೀರಪ್ಪ ಕನ್ನೆಳ್ಳಿ ಮಾತನಾಡಿ, ಈ ಭಾಗದ 35 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಂಗಣ :
ಗುರಮಠಕಲ್ ಹಾಗೂ ಸೈದಾಪುರ ಪಟ್ಟಣಗಳಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ಗ್ರಾಮೀಣ ಕ್ರೀಡಾಂಗಣ ನಿರ್ಮಾಣಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ. ಸ್ಥಳ ಗುರುತಿಸಿ ನೀಡಿದರೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಕಂದಕೂರ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಲು ಸಿದ್ಧಪಡಿಸಿದ್ದ ಪುಷ್ಪಾಲಂಕೃತ ತೆರೆದ ವಾಹನವನ್ನು ನಿರಾಕರಿಸಿದ ಶಾಸಕ ಶರಣಗೌಡ ಕಂದಕೂರ, ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಕ್ಕಳ ಪಥಸಂಚಲನ ವೀಕ್ಷಿಸುವ ಮೂಲಕ ಸರಳತೆ ಮೆರೆದರು. ಕಾರ್ಯಕ್ರಮಕ್ಕೂ ಮುನ್ನ ಶಾಲಾ ಮಕ್ಕಳು ಪುಷ್ಪವೃಷ್ಠಿ ಮೂಲಕ ಅವರನ್ನು ಸ್ವಾಗತಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಕುರಿತು ಮುಂಬರುವ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಶಿಕ್ಷಕರ ನೇಮಕಾತಿಗೆ ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ.
-ಶರಣಗೌಡ ಕಂದಕೂರ, ಗುರಮಠಕಲ್ ಶಾಸಕ






