Yadgiri | ಬಾವಿ ನೀರು ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ !

ಯಾದಗಿರಿ : ಕಳೆದ ನಾಲ್ಕು ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಾವಿಯಿಂದ ಪೂರೈಕೆಯಾದ ನೀರನ್ನು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಬೀರನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ನಳದ ನೀರಿನ ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಪೈಪ್‌ಲೈನ್ ಮೂಲಕ ಬಾವಿಯ ನೀರನ್ನು ಮನೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ನೀರನ್ನು ಸೇವಿಸಿದ ಬಳಿಕ ಹಲವರಿಗೆ ವಾಂತಿ, ಭೇದಿ, ಹೊಟ್ಟೆನೋವು ಹಾಗೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡವರಲ್ಲಿ ಮಕ್ಕಳು, ಮಹಿಳೆಯರು ಹಾಗೂ ವೃದ್ಧರ ಸಂಖ್ಯೆಯೇ ಹೆಚ್ಚಿದ್ದು, ಅವರನ್ನು ಶಹಾಪುರ ತಾಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಆರೋಗ್ಯ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ಕಾರ್ಯನಿರ್ವ
ಹಿಸುತ್ತಿದ್ದ ಶುದ್ಧ ಕುಡಿಯುವ ನೀರಿನ ಘಟಕವೂ ಹಲವು ದಿನಗಳಿಂದ ಸ್ಥಗಿತಗೊಂಡಿರುವುದರಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿಂದೆ ಬೋರ್‌ವೆಲ್ ಮೂಲಕ ನೀರು ಪೂರೈಕೆಯಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬಾವಿಯ ನೀರನ್ನು ಸರಬರಾಜು ಮಾಡಲಾಗಿದ್ದು, ಅದೇ ಅಸ್ವಸ್ಥತೆಗೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮಕ್ಕೆ ತಕ್ಷಣ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬೀರನೂರ ಗ್ರಾಮದಲ್ಲಿ ಬಾವಿ ನೀರು ಸೇವಿಸಿ ಹಲವು ಜನ ಅಸ್ವಸ್ಥಗೊಂಡಿದ್ದ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಗ್ಯ ಇಲಾಖೆಯ ಡಿಎಚ್‌ಒ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಯ ಸಂಪೂರ್ಣ ವಿವರವನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ಲವೀಶ್ ಒರಡಿಯಾ,ಜಿಪಂ ಸಿಇಒ
ಶಹಾಪುರ ತಾಲೂಕಿನ ಬೀರನೂರ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ನಳದ ನೀರಿನ ಪೂರೈಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಪೈಪ್‌ಲೈನ್ ಮೂಲಕ ಬಾವಿಯ ನೀರನ್ನು ಮನೆಗಳಿಗೆ ಸರಬರಾಜು ಮಾಡಲಾಗಿದೆ. ಈ ನೀರನ್ನು ಸೇವಿಸಿದ ಬಳಿಕ ಗ್ರಾಮದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ, ಹೊಟ್ಟೆನೋವು ಹಾಗೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.






