Yadgiri | ಖರ್ಗೆ ರ‍್ಯಾಲಿ ನಡೆಸಿದ 'ಸ್ಥಳ ಶುದ್ಧೀಕರಣ' | ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ಯಾದಗಿರಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬಳಿಕ, ಮರುದಿನ ಕೆಲವರು ಗಂಗಾಜಲದಿಂದ ಸ್ಥಳವನ್ನು ಶುದ್ಧೀಕರಿಸಿ ಹೋಮ ನಡೆಸಿದ ಘಟನೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ನೇತಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಯಚೂರು ಲೋಕಸಭಾ ಸದಸ್ಯ ಜಿ. ಕುಮಾರ್ ನಾಯಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನಪೂರ ಸೇರಿದಂತೆ ಕಾಂಗ್ರೆಸ್ ನಾಯಕರು, ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳಂತೆ ದೇಶದ ಆಡಳಿತ ನಡೆಯಬೇಕು. ಆದರೆ ಬಿಜೆಪಿ ಹಾಗೂ ಅದರ ಬೆಂಬಲಿತ ಸಂಘಟನೆಗಳು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಮೂಡಿಸಿ ಸಾಮರಸ್ಯ ಹಾಳು ಮಾಡುತ್ತಿವೆ ಎಂದು ಆರೋಪಿಸಿದರು.
ದೇಶದ ಪ್ರಗತಿಗೆ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಅಪಾರ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂವಿಧಾನದ 371(ಜೆ) ತಿದ್ದುಪಡಿ ಸೇರಿದಂತೆ ಹಲವು ಮಹತ್ವದ ವಿಚಾರಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅಂತಹ ಹಿರಿಯ ನಾಯಕನನ್ನು ಕೆಲ ಸಂಘಟನೆಗಳ ಕಾರ್ಯಕರ್ತರು ಅವಮಾನಿಸಿರುವುದು ಖಂಡನೀಯ. ಘಟನೆಗೆ ಸಂಬಂಧಿಸಿದಂತೆ ಉತ್ತರಾಖಂಡ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಡಾ. ಖರ್ಗೆ ಅವರು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದರು. ಸಂಸತ್ ಅಧಿವೇಶನದಲ್ಲಿ ಪ್ರಮುಖ ವಿಚಾರಗಳ ಕುರಿತು ವಿರೋಧ ಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಡೆದಿರುವುದು ಕೇವಲ ವೈಯಕ್ತಿಕ ಅವಮಾನವಲ್ಲ, ದೇಶದ ಜನತೆ ಹಾಗೂ ಮಾನವೀಯತೆಗೆ ಮಾಡಿದ ಅವಮಾನವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಇಲ್ಲವಾದಲ್ಲಿ ಸಮಾಜದಲ್ಲಿ ಅಶಾಂತಿ ಹಾಗೂ ಅರಾಜಕತೆ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ, ಜಿಲ್ಲಾಧ್ಯಕ್ಷ ಮರೆಪ್ಪ ಬಿಳ್ಹಾರ, ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಕೆಪಿಸಿಸಿ ಸದಸ್ಯ ಶರಣಪ್ಪ ಮಾನೇಗಾರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಾಮಸನ್ ಮಾಳಿಕೇರಿ, ಗುಂಡಪ್ಪ ಸೊಲ್ಲಾಪೂರ, ಸುದರ್ಶನ ನಾಯಕ, ಶೇಖರ ದೊರೆ ಸುರಪುರ, ಚಿದಾನಂದಪ್ಪ ಕಾಳೆಬೆಳಗುಂದಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಈಟಿ, ಗ್ರಾಮೀಣ ಘಟಕದ ಅಧ್ಯಕ್ಷ ಲಕ್ಷ್ಮಣರಡ್ಡಿ, ಬಾಷುಮೀಯ ವಡಗೇರಾ, ಭೀಮರಾಯ ಠಾಣಾಗುಂದಿ, ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್, ಹಣಮಂತ ಲಿಂಗೇರಿ, ಸುರೇಶ ಮಡ್ಡಿ, ಲಕ್ಷö್ಮಣ ರಾಠೋಡ, ಪದ್ಮಾವತಿ, ರೇಣುಕಾ, ಹೊನ್ನೇಶ ಬಳಿಚಕ್ರ, ಸಂಜೀವಕುಮಾರ ಕಾವಲಿ, ರಾಘವೇಂದ್ರ ಮಾನಸಗಲ್, ಕಳಸಪ್ಪ ಸಾವೂರ, ಮಾಳಿಂಗರಾಯ ಅನಕಸೂಗುರ, ತಿಮ್ಮಣ್ಣ ನಾಯಕ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.






