Yadgiri | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ

ಯಾದಗಿರಿ: ಪಡಿತರ ಚೀಟಿದಾರರಿಗೆ ವಿತರಿಸುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಅಥವಾ ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೇಷನ್ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸುವ ಅಥವಾ ಸಾಗಿಸುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಹಿಂದೆ ನಡೆದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ವಿಶ್ವಾಸಾರ್ಹ ಮಾಹಿತಿ ದೊರೆತ ಕೂಡಲೇ ತುರ್ತು ಕಾರ್ಯಾಚರಣೆ ನಡೆಸಿ ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಣಿಕೆ ತಡೆಗಟ್ಟುವ ಜೊತೆಗೆ ಎಫ್‌ಐಆರ್ ದಾಖಲಿಸುವಂತೆ ತಾಲೂಕು ಆಹಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲ ಸದಸ್ಯರ ಜಾತಿ ಪ್ರಮಾಣಪತ್ರಗಳನ್ನು ನ್ಯಾಯಬೆಲೆ ಅಂಗಡಿಗಳಿಗೆ ಸಲ್ಲಿಸಿ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ, ಜಿಲ್ಲೆಯಲ್ಲಿ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನೂ ಇ-ಕೆವೈಸಿ ಪೂರ್ಣಗೊಳಿಸದ ಫಲಾನುಭವಿಗಳು ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ತಿಂಗಳಾಂತ್ಯದೊಳಗೆ ಜಿಲ್ಲೆಯಲ್ಲಿ ಶೇ.100ರಷ್ಟು ಇ-ಕೆವೈಸಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಂಡು ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ತಲುಪುವಂತೆ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.






