Yadgiri | ದಲಿತರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

ಯಾದಗಿರಿ: ರಾಜ್ಯದಲ್ಲಿ ಹೊಲೆಮಾದಿಗ ಸಮುದಾಯದವರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಮಾದಿಗ ದಂಡೋರ MRPS ಸಂಘಟನೆಯ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಅಧ್ಯಕ್ಷ ಕಾಶಪ್ಪ ಮಾದಿಗ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಒತ್ತಾಯಿಸಿದರು.
ಶುಕ್ರವಾರ ಯಾದಗಿರಿಗೆ ಆಗಮಿಸಿದ್ದ ಸಚಿವ ಪ್ರಿಯಾಂಕ್ ಎಂ. ಖರ್ಗೆ ಅವರನ್ನು ಕಾಶಪ್ಪ ಮಾದಿಗ ನೇತೃತ್ವದಲ್ಲಿ ಸಂಘಟನೆಯ ರಾಜ್ಯ ಹಾಗೂ ಜಿಲ್ಲಾ ಮುಖಂಡರು ಭೇಟಿ ಮಾಡಿ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.
ಸಮುದಾಯದವರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ, ಪರಿಹಾರ ಹಾಗೂ ನ್ಯಾಯ ಒದಗಿಸಬೇಕು. ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಮನವಿ ಸ್ವೀಕರಿಸಿದ ಸಚಿವರು, ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಚಂದ್ರಶೇಖರ ನಡುಮನಿ, ಮಲ್ಲು ಬೆಳಗೇರಾ, ಸೋಮು ಬಂದೊಡ್ಡಿ, ನಾಗರಾಜ ಕಕ್ಕೇರಾ, ಶರಣಪ್ಪ ವಡಗೇರಿ, ಬಸವರಾಜ ಹಾದಿಮನಿ, ಪರಶುರಾಮ ಪೂಜಾರಿ, ವಿಲ್ಸನ್ ಹಾಲಿಗೆರಾ, ತಿಪ್ಪಣ್ಣ ಗೊಂದನೂರ, ಲಕ್ಷ್ಮಣ ಅಲ್ದಾಳ ಸೇರಿದಂತೆ ಸಂಘಟನೆಯ ವಿವಿಧ ಹಂತದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.






