ವಾಗಣಗೇರಾ, ಅರಿಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಭೇಟಿ

ಸುರಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಲವೀಶ ಒರಡಿಯಾ ಅವರು ತಾಲೂಕಿನ ವಾಗಣಗೇರಾ ಹಾಗೂ ಅರಿಕೇರಾ ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು, ಆಡಳಿತಾತ್ಮಕ ಕಾರ್ಯಗಳು ಹಾಗೂ ಸಾರ್ವಜನಿಕ ಮೂಲಭೂತ ಸೌಲಭ್ಯಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.
ಮೊದಲಿಗೆ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಣೆ ಪ್ರಗತಿ ಕುರಿತು ವಿವರವಾಗಿ ಪರಿಶೀಲನೆ ನಡೆಸಿದ ಅವರು, ಗ್ರಾಮ ಪಂಚಾಯಿತಿಗಳ ಆರ್ಥಿಕ ಸದೃಢತೆಗೆ ತೆರಿಗೆ ವಸೂಲಾತಿ ಅತ್ಯಂತ ಪ್ರಮುಖವಾಗಿದ್ದು, ಬಾಕಿ ಇರುವ ತೆರಿಗೆಗಳನ್ನು ತ್ವರಿತವಾಗಿ ವಸೂಲಿ ಮಾಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಮನೆ ತೆರಿಗೆ, ನೀರಿನ ತೆರಿಗೆ ಹಾಗೂ ಇತರೆ ತೆರಿಗೆಗಳ ವಸೂಲಾತಿ ಪಟ್ಟಿಗಳನ್ನು ಪರಿಶೀಲಿಸಿ, ಸಾರ್ವಜನಿಕರಲ್ಲಿ ತೆರಿಗೆ ಪಾವತಿ ಕುರಿತು ಜಾಗೃತಿ ಮೂಡಿಸುವಂತೆ ತಿಳಿಸಿದರು.
ನಂತರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಫೈನಲ್ಸ್, ಮಸ್ಟರ್ ರೋಲ್, ಕೂಲಿ ಪಾವತಿ ವಿವರಗಳು ಹಾಗೂ ತಾಂತ್ರಿಕ ದಾಖಲಾತಿಗಳನ್ನು ಪರಿಶೀಲಿಸಿದರು. ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು, ನೀರಿನ ಲಭ್ಯತೆ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು. ವಾಟರ್ ಟೆಸ್ಟಿಂಗ್ ವರದಿಗಳು ಹಾಗೂ ಸಂಬಂಧಿತ ದಾಖಲಾತಿಗಳನ್ನು ವೀಕ್ಷಿಸಿ, ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಗ್ರಾಮದ ಕುಡಿಯುವ ನೀರಿನ ಬಾವಿಗಳಿಗೆ ಸ್ಥಳ ಪರಿಶೀಲನೆ ನಡೆಸಿ, ಬಾವಿಗಳಲ್ಲಿನ ನೀರಿನ ಮಟ್ಟ, ಸ್ವಚ್ಛತೆ ಹಾಗೂ ನೀರು ಸರಬರಾಜು ವ್ಯವಸ್ಥೆಯನ್ನು ಪರಿಶೀಲಿಸಿದರು. ಬೇಸಿಗೆ ಹಿನ್ನೆಲೆ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯವಿದ್ದಲ್ಲಿ ಪರ್ಯಾಯ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಎನ್‌ಆರ್‌ಎಲ್‌ಎಂ ಒಕ್ಕೂಟದ ಪುಸ್ತಕಗಳು, ಸಭಾ ದಾಖಲಾತಿಗಳು ಹಾಗೂ ಹಣಕಾಸು ನಿರ್ವಹಣೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ, ದಾಖಲೆಗಳನ್ನು ನಿಯಮಾನುಸಾರ ಮತ್ತು ನವೀಕೃತವಾಗಿ ನಿರ್ವಹಿಸುವಂತೆ ತಿಳಿಸಿದರು. ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವಂತೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ, ಹಾಜರಾತಿ, ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಮಕ್ಕಳ ಆರೋಗ್ಯ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.
ಗ್ರಾಮದ ಗ್ರಂಥಾಲಯಕ್ಕೂ ಭೇಟಿ ನೀಡಿ ಅಲ್ಲಿನ ಪುಸ್ತಕಗಳ ನಿರ್ವಹಣೆ, ಓದುಗರ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣದ ಬಗ್ಗೆ ಪರಿಶೀಲಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಯುವಕರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಬಸವರಾಜ ಸಜ್ಜನ್, ತಾಂತ್ರಿಕ ಸಂಯೋಜಕ ಶಿವಯೋಗಿ ಹಿರೇಮಠ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪುತ್ರಪ್ಪಗೌಡ, ಉಮರ್, ಐಇಸಿ ಮಲ್ಲಿಕಾರ್ಜುನ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.






